ಸುದ್ದಿಬಿಂದು ಬ್ಯೂರೋ ವರದಿ
ಸೊರಬ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಮರವೊಂದು ವಾಹನದ ಮೇಲೆ ಉರುಳಿಬಿದ್ದ ದುರಂತ ಘಟನೆ ನಡೆದಿದೆ.

ಗ್ರಾಮದಲ್ಲಿ ನಡೆಯುತ್ತಿದ್ದ ವಾರದ ಸಂತೆ ಹಿನ್ನೆಲೆಯಲ್ಲಿ ಸುತ್ತಲಿನ ಗ್ರಾಮಸ್ಥರು ತಮ್ಮ ವಾಹನಗಳನ್ನು ರಸ್ತೆ ಪಕ್ಕ ನಿಲ್ಲಿಸಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿರುಸಿನ ಗಾಳಿಗೆ ಒಣಗಿದ ಮರವೊಂದು ಕಾರಿನ ಮೇಲೆ ಉರುಳಿಬಿದ್ದು, ವಾಹನವು ಸಂಪೂರ್ಣವಾಗಿ ಜಖಂಗೊಂಡಿದೆ. ಈ ಸಂದರ್ಭ ಸಮೀಪದಲ್ಲಿದ್ದ ಇಬ್ಬರು ವ್ಯಕ್ತಿಗಳಿಗೆ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರ ಸಹಾಯದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಸ್ಥಳೀಯರು ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮ ಮತ್ತು ಪಟ್ಟಣ ವ್ಯಾಪ್ತಿಯಲ್ಲಿರುವ ಒಣಗಿದ ಹಾಗೂ ಬೀಳುವ ಸ್ಥಿತಿಯಲ್ಲಿರುವ ಮರಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಸಾರ್ವಜನಿಕರ ಪ್ರಾಣ ಮತ್ತು ಆಸ್ತಿಗೆ ಭದ್ರತೆ ಕಾಪಾಡುವ ದೃಷ್ಟಿಯಿಂದ ಮುಂಚಿತ ನಿರ್ವಹಣೆ ಅಗತ್ಯವೆನ್ನಲಾಗಿದೆ.

ಇದನ್ನೂ ಓದಿ: Gold Rate Today/ಚಿನ್ನ ಖರೀದಿ ಸುಲಭವಲ್ಲ.! ಬೆಲೆ ಏರಿಕೆಯಿಂದ ಗ್ರಾಹಕರಿಗೆ ಶಾಕ್