ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಾಳೆ ಜುಲೈ 29 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಗ್ಗೆ 10 ಗಂಟೆಗೆ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚೆ ನಡೆಸುವರು.

ಮದ್ಯಾಹ್ನ 12 ಗಂಟೆಗೆ ಅಜ್ವಿ ಓಷಿಯನ್ ಹೋಟೆಲ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ “ಸ್ಮಾರ್ಟ್ ಕಾರ್ಡ್” ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ವಿವಿಧ ಯೋಜನೆಯಡಿಯಲ್ಲಿ ನೆರವು ಉತ್ತರ ಕನ್ನಡ ಜಿಲ್ಲೆಯಲ್ಲಿನ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತಿದ್ದು, ಕಾರ್ಮಿಕ ಇಲಾಖೆಯಲ್ಲಿನ ಎಲ್ಲಾ ಯೋಜನೆಗಳ ಸಂಪೂರ್ಣ ನೆರವು ಕಾರ್ಮಿಕ ರಿಗೆ ಒದಗಿಸಲಾಗುತ್ತಿದೆ.

ದೇಶದ ದುಡಿಯುವ ವರ್ಗದಲ್ಲಿ ಶೇ. 83ಕ್ಕಿಂತ ಹೆಚ್ಚು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಇರುವುದಾಗಿ ಅಂದಾಜಿಸಿದ್ದು,ಅವರು ಶಾಸನಬದ್ಧ ಸೌಲಭ್ಯಗಳಿಂದ ವಂಚಿತರಾಗಿರುವ ಸಂಭವ ಹೆಚ್ಚಾಗಿರುತ್ತದೆ. ಇವರ ಜೀವನ ಮಟ್ಟವನ್ನು ಉತ್ತಮಪಡಿಸಿ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ರಚಿಸಲಾಗಿದೆ.

ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾಗಿದ್ದು, ಸಂಘಟಿತ ಕಾರ್ಮಿಕರಿಗೆ ದೊರಕುವ ಕಾನೂನಾತ್ಮಕ ಸೌಲಭ್ಯಗಳಿಂದ ವಂಚಿತರಾಗಿದ್ದು, ಮಂಡಳಿಯು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ.

ಅಂಬೇಡ್ಕರ್ ಕಾರ್ಮಿಕ ಸಹಾಯ ಯೋಜನೆಯಡಿ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದ್ದು, ಈ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದ್ದು ಜಿಲ್ಲೆಯಲ್ಲಿ ಇದುವರೆಗೂ 97,694 ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ.

ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‌ಗಳು ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದು (20-70 ವರ್ಷ ವಯೋಮಿತಿ) ಜಿಲ್ಲೆಯಲ್ಲಿ ಈವರೆಗೆ 34 ಅಪಘಾತ ಪ್ರಕರಣಗಳಲ್ಲಿ ಒಟ್ಟು ರೂ. 1.35 ಕೋಟಿ ಪರಿಹಾರ ವಿತರಿಸಲಾಗಿದೆ ಹಾಗೂ 25 ವಿದ್ಯಾರ್ಥಿಗಳಿಗೆ ರೂ. 2.50 ಲಕ್ಷಗಳ ಶೈಕ್ಷಣಿಕ ಧನಸಹಾಯ ಪಾವತಿಸಲಾಗಿದೆ.

ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ತಲಾ 2 ಲಕ್ಷ ರೂ.ಗಳ ಅಪಘಾತ ಪರಿಹಾರ ಹಾಗೂ ಜೀವ ವಿಮಾ ಸೌಲಭ್ಯ ಸೇರಿದಂತೆ ಒಟ್ಟು 4 ಲಕ್ಷ ರೂ.ಗಳ ವಿಮಾ ಸೌಲಭ್ಯ ಒದಗಿಸುವ “ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ” ಅಡಿಯಲ್ಲಿ 678 ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ.

ದಿನ ಪತ್ರಿಕೆ ವಿತರಿಸುವ ಕಾರ್ಮಿಕರಿಗೆ ರೂ.2 ಲಕ್ಷಗಳ ಅಪಘಾತ ಪರಿಹಾರ ಹಾಗೂ ರೂ. 1 ಲಕ್ಷದವರೆಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ “ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ”
ಅಡಿಯಲ್ಲಿ, 131ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ.

ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಯೋಜನೆಯಡಿ ಚಾಲಕ, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್ ಗುಮಾಸ್ತ, ನಗದು ಗುಮಾಸ್ತ, ಡಿಪೋ ಗುಮಾಸ್ತ, ಸಮಯ ಪಾಲಕ, ಕಾವಲುಗಾರ ಅಥವಾ ಪರಿಚಾರಕ, ಮೋಟಾರು ಗ್ಯಾರೇಜುಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ, ಲೋಡಿಂಗ್ ಮತ್ತು ಅನ್ ಲೋಡಿಂಗ್ ಕಾರ್ಮಿಕರು, ಪಂಚರ್ ದುರಸ್ತಿ ಮಳಿಗೆಗಳಲ್ಲಿ, ವೀಲ್ ಬ್ಯಾಲೆನ್ಸಿಂಗ್ ಮತ್ತು ಅಲೈನ್ಮೆಂಟ್ ಘಟಕಗಳಲ್ಲಿ, ನೀರಿನಿಂದ ಸ್ವಚ್ಚಗೊಳಿಸುವ ಘಟಕಗಳಲ್ಲಿ ಕೆಲಸ ಮಾಡುವವರು ಮೋಟಾರು ವಾಹನ ಹೊರಕವಚ ನಿರ್ಮಾಣ ಘಟಕಗಳಲ್ಲಿ, ಟಿಂಕರಿಂಗ್, ಎಲೆಕ್ಟ್ರಿಕಲ್ ಹಾಗೂ ಎಸಿ ಘಟಕ ಇತ್ಯಾದಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 12,297 ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ.

ಅಲ್ಲದೆ ರಾಜ್ಯದಲ್ಲಿ, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಸಂಪನ್ಮೂಲ ಕ್ರೋಢೀಕರಿಸಲು ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ (ಕಲ್ಯಾಣ) ಸುಂಕ ಅಧಿನಿಯಮ-2024 ಅನ್ನು ಜಾರಿಗೋಳಿಸಿದ್ದು ನಿಯಮಾವಳಿಯನ್ನು ರೂಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಸಂಪನ್ಮೂಲ ಕ್ರೋಢೀಕರಿಸಲು ನಿಯಮಾವಳಿಯನ್ನು ರೂಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಜಿಲ್ಲೆಯ ಅಸಂಘಟಿತ ಕಾರ್ಮಿಕರು ತಮಗೆ ಲಭ್ಯವಿರುವ ಯೋಜನೆಗಳು ಮತ್ತು ಅವುಗಳ ನೋಂದಣಿ ಹಾಗೂ ನೆರವು ಕುರಿತಂತೆ ಕಾರ್ಮಿಕ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ತಿಳಿಸಿದ್ದಾರೆ.

ಇದನ್ನೂ ಓದಿ: ಸಂಸದರ ವಿರುದ್ಧ ಸಚಿವ ಮಂಕಾಳ್ ವೈದ್ಯ ಕಿಡಿ