ಸುದ್ದಿಬಿಂದು ಬ್ಯೂರೋ ವರದಿ

ಶಿರಸಿ: ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ,ಅಕ್ರಮ ಚಟುವಟಿಕೆಗಳ ತಾಣವಾಗಿಸಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಾವೇರಿ ಮೂಲದ ವೈದ್ಯರ ಹೋಂ ಸ್ಟೇ ವಿರುದ್ಧ ಪ್ರವಾಸೋದ್ಯಮ ಇಲಾಖೆ ತಕ್ಷಣ ಕ್ರಮ ಜರುಗಿಸಿ ಬೀಗ ಜಡಿಯಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಕಳೆದ ಒಂದುವಾರದ ಹಿಂದೆ ಈ ಹೋಂ ಸ್ಟೇ ಮೇಲೆ ಶಿರಸಿ ಡಿವೈಎಸ್‌ಪಿ ಗೀತಾ ಪಾಟೀಲ್ ಅವರ ತಂಡ ದಾಳಿ ನಡೆಸಿ, ಹೋಂ ಸ್ಟೇ ಒಳಗೆ ಲಕ್ಷಾಂತರ ಹಣ ಪಂತ ಕಟ್ಟಿಕೊಂಡು ಇಸ್ಪೀಟ್ ಆಟದಲ್ಲಿ ತೊಡಗಿದ್ದ ೧೯ ಮಂದಿಯನ್ನು ಹಾಗೂ ಅಕ್ರಮ ದಂಧೆಗೆ ಅವಕಾಶ ನೀಡಿದ ಹೋಂ ಸ್ಟೇ ಮಾಲೀಕ ಡಾ.ಬಸವರಾಜ್ ವೀರಾಪುರ ಅವರ ವಿರುದ್ಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಈ ಅಕ್ರಮ ಇಸ್ಪೀಟ್ ದಂಧೆ ಕಳೆದ ಎರಡು-ಮೂರು ವರ್ಷಗಳಿಂದ ಸದ್ದುಗದ್ದಲವಿಲ್ಲದೆ ನಡೆಯುತ್ತಿತ್ತು ಎನ್ನಲಾಗಿದೆ. ಹೀಗಾಗಿ ಸ್ಥಳೀಯರು ಹಾಗೂ ಗ್ರಾಮ ಪಂಚಾಯತ್‌ನ ಕೆಲ ಸದಸ್ಯರು ಈ ಹೋಂ ಸ್ಟೇಗೆ ಅನುಮತಿ ನೀಡಬಾರದು ಎಂದು ಜಿಲ್ಲಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಗೆ ದೂರು ಸಲ್ಲಿಸಿದ್ದರು ಎನ್ನಲಾಗಿದೆ.

ಪೊಲೀಸರು ಇಸ್ಪೀಟ್ ಆಟ ನಡೆಯುತ್ತಿರುವ ಮಾಹಿತಿ ಆಧರಿಸಿ ದಾಳಿ ನಡೆಸಿದ್ದಾರೆ. ಈ ಕಾರ್ಯಕ್ಕೆ ಶಿರಸಿ ಸೇರಿ ಉತ್ತರ ಕನ್ನಡ, ಹಾವೇರಿ, ದಾವಣಗೆರೆ ಜಿಲ್ಲೆಯ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಈ ಕುರಿತು ಈಗಾಗಲೇ ಪ್ರತಿಕ್ರಿಯೆ ನೀಡಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅವರು ಅಕ್ರಮ ರೆಸಾರ್ಟ್‌ಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.ಇವರ ಹೇಳಿಕೆ ಹೊರಬಂದ ತಕ್ಷಣ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಮತ್ತೊಂದು ಕಡೆ ಈ ಹೇಳಿಕೆಯನ್ನು ಕಾರ್ಯರೂಪಕ್ಕೆ ತರಬೇಕು ಎಂಬ ಚರ್ಚೆಗಳು ಜೋರಾಗಿವೆ. ಪ್ರವಾಸೋದ್ಯಮ ಇಲಾಖೆಯ ಅನುಮತಿ ಇಲ್ಲದೆ ಕಾನೂನುಬಾಹಿರವಾಗಿ ಹೋಂ ಸ್ಟೇ ನಡೆಸುವುದರ ಜೊತೆಗೆ ಅಕ್ರಮ ಚಟುವಟಿಕೆಗಳ ಕೇಂದ್ರವಾಗಿರುವ ಇಂತಹ ಹೋಂ ಸ್ಟೇಗಳ ವಿರುದ್ಧ ಆದಷ್ಟು ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸುತ್ತಿದ್ದಾರೆ.

ಹೊಸಾಗಿ ಜಿಲ್ಲೆಗೆ ಬಂದಿರುವ ಎಸ್ಪಿ ಅವರು ಬೈರುಂಬೆಯಲ್ಲಿರುವ ಅಕ್ರಮ ಹೋಂ ಸ್ಟೇ ಸೇರಿದಂತೆ ಇನ್ನೂಳಿದ ಅಕ್ರಮ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.