ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು, ದಾವಣಗೇರೆ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ (94) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಭಾರತದಲ್ಲೇ ಅತ್ಯಂತ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿಂದೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದರು. ಪುತ್ರ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು, ತಂದೆ ಶೀಘ್ರದಲ್ಲೇ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದ್ದರು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲ ನೀಡದೇ ಇಂದು ಸಂಜೆ ಅವರು ಇಹಲೋಕ ತ್ಯಜಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದರು. ಈ ವೇಳೆ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆ ಬಗ್ಗೆ ಮುಖ್ಯಮಂತ್ರಿಗೆ ವಿವರಿಸಿದ್ದರು. ಸಿಎಂ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ದಾವಣಗೆರೆಯಲ್ಲಿ ಅಭಿಮಾನಿಗಳು ಹಾಗೂ ಬೆಂಬಲಿಗರು ಅವರ ಚೇತರಿಕೆಗೆ ಪ್ರಾರ್ಥನೆ, ಪೂಜೆಗಳನ್ನು ಕೂಡ ನಡೆಸಿದ್ದರು.
ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ ಶಾಮನೂರು ಶಿವಶಂಕರಪ್ಪ ಅವರು ಸಾಮಾನ್ಯ ಕುಟುಂಬದಿಂದ ರಾಜಕೀಯ ಬದುಕಿಗೆ ಕಾಲಿಟ್ಟವರು. ರಾಜಕೀಯ ಮಾತ್ರವಲ್ಲದೆ ಶಿಕ್ಷಣ, ಉದ್ಯಮ ಹಾಗೂ ಸಮಾಜಸೇವೆಯಲ್ಲಿ ಅವರು ಅಪಾರ ಕೊಡುಗೆ ನೀಡಿದ್ದಾರೆ.
ಅವರು ಆರು ಬಾರಿ ವಿಧಾನಸಭಾ ಸದಸ್ಯರಾಗಿದ್ದು, ಒಂದು ಬಾರಿ ಲೋಕಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವೂ ಅವರಿಗಿತ್ತು. ಜೊತೆಗೆ ದಾವಣಗೆರೆಯ ಅಂಗವಿಕಲರ ಆಶಾಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್, ದಾವಣಗೆರೆ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿದ್ದರು. ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿಯೂ ಅವರು ಕಾರ್ಯನಿರ್ವಹಿಸಿದ್ದರು.
ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೇರಿದಂತೆ ಹಲವು ವೃತ್ತಿಪರ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅವರು ಮಹತ್ವದ ಪಾತ್ರವಹಿಸಿದ್ದರು. ದಾವಣಗೆರೆಯ ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಸೇವೆ ಸದಾ ಸ್ಮರಣೀಯವಾಗಿರಲಿದೆ.


