ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಅತೀ ದೊಡ್ಡ ಉತ್ಸವವೆಂದರೆ ಅದು ಕರಾವಳಿ ಉತ್ಸವವಾಗಿದೆ. ರವೀಂದ್ರನಾಥ ಠಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ 8 ವರ್ಷದ ನಂತರ ಡಿ. 22 ರಿಂದ 28 ರ ವರೆಗೆ ನಡಯುವ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ತಿರ್ಮಾನಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
ಅವರು ಶುಕ್ರವಾರ ಗೋಕರ್ಣದಲ್ಲಿ ಕರಾವಳಿ ಉತ್ಸವ-2025 ರ ಲೋಗೋ, ಕಾರ್ಯಕ್ರಮದ ಪ್ರೋಮೋ ವಿಡಿಯೋ ಬಿಡುಗಡೆಗೊಳಿಸಿ ಮಾತನಾಡಿದರು. ಕರಾವಳಿ ಉತ್ಸವವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ವಿವಿಧ ಸಚಿವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಕಲಾವಿದರು ಪ್ರದರ್ಶನ ನೀಡಲಿದ್ದಾರೆ ಎಂದರು.
ಕಾರ್ಯಕ್ರಮ ಆಯೋಜನೆಗೆ ಸರ್ಕಾರದಿಂದ ರೂ.5 ಕೋಟಿ ಬಿಡುಗಡೆಯಾಗಿದ್ದು, ಕಾರ್ಯಕ್ರಮಕ್ಕೆ ರೂ.10 ಕೋಟಿ ಅಂದಾಜಿಸಲಾಗಿದೆ. ಆಡಳಿತ ಸುಧಾರಣ ಆಯೋಗದ ಅಧ್ಯಕ್ಷರು ಹಾಗೂ ಶಾಸಕ ಆರ್.ವಿ ದೇಶಪಾಂಡೆ ಅವರು ಕರಾವಳಿ ಉತ್ಸವ ಕಾರ್ಯಕ್ರಮವನ್ನು ಈ ಹಿಂದೆ ಮಾಡಿರುವದರಿಂದ ಅದನ್ನು ಮುಂದುವರೆಸಿಕೊಂಡು ಹೋಗಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಕರಾವಳಿ ಉತ್ಸವವವನ್ನು ವಿಜೃಂಭಣೆಯಿಂದ ಮಾಡಲು ಮುಖ್ಯಮಂತ್ರಿಗಳ ಅನುಮತಿ ಪಡೆದು ಕಳೆದ ಒಂದು ತಿಂಗಳಿನಿoದ ಪೂರ್ವ ಸಿದ್ದತೆ ಮಾಡಿಕೊಂಡಿದ್ದಾರೆ, ಈ ಉತ್ಸವಕ್ಕೆ ಮಂತ್ರಿಗಳು, ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಸಂಸದರ ಸಹಕರದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದ ಯಶಸ್ವಿಗೆ ಮಾಧ್ಯಮದವರು ಸೇರಿದಂತೆ ಜಿಲ್ಲೆಯ ಸಂಘ ಸಂಸ್ಥೆಗಳು ತಮ್ಮ ಸಹಕಾರ ನೀಡಬೇಕು ಎಂದ ಅವರು, ಈಗಾಗಲೇ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಈ ಸಮಿತಿಗಳು ತಮಗೆ ವಹಿಸಿದ ಜವಾಬ್ದಾರಿಯಂತೆ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಲೋಪವಾಗದಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಿ ನ್ಯಾಯ್ಕ, ತಹಶೀಲ್ದಾರ ಶ್ರೀಕೃಷ್ಣ ಕಾಮಕರ್ ಮತ್ತಿತರರು ಇದ್ದರು
ಇದನ್ನೂ ಓದಿ/ ಡಿಕೆ ಶಿವಕುಮಾರ ಸಿಎಂ ಆಗೋದು ನಿಶ್ಚಿತ : ಸಚಿವ ಮಂಕಾಳ್ ವೈದ್ಯ


