ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗಿಬ್ ಸರ್ಕಲ್ ಸಮೀಪವಿರುವ ಖಾದಿಮ್ ಚಪ್ಪಲಿ ಅಂಗಡಿಯಲ್ಲಿ ತಡರಾತ್ರಿ ಆಕಸ್ಮಿಕವಾಗಿ ಸಂಭವಿಸಿದ ಭಾರೀ ಅಗ್ನಿ ಅವಘಡಕ್ಕೆ ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿದೆ.

ಬೆಂಕಿ ಅವಘಡದಿಂದಾಗಿ ಅಂಗಡಿಯೊಳಗ ಇದ್ದ ಚಪ್ಪಲಿಗಳು ಮತ್ತು ಇತರೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಸುಮಾರು 8 ಲಕ್ಷ ರೂ. ಗಳಿಗೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿಯ ತೀವ್ರತೆಗೆ ಅಂಗಡಿಯೊಳಗೆ ಧಗಧಗನೆ ಜ್ವಾಲೆಗಳು ಹೊತ್ತಿ ಉರಿದ ದೃಶ್ಯ ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತು.

ಘಟನೆಯ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕೆಲ ಸಮಯದ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಅಗ್ನಿ ಅವಘಡದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ