ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ತಾಲ್ಲೂಕಿನ ಕದ್ರಾ ಗ್ರಾಮದ ಯುವತಿ ರಿಶೆಲ್ ಕ್ರಿಸ್ತೋದ್ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ ಹಾಗೂ ಆಘಾತಕಾರಿ ಘಟನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ತೀವ್ರವಾಗಿ ಖಂಡಿಸಿದ್ದು,ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೇ ಆಗಿದ್ದರು, ಎಷ್ಟೇ ಪ್ರಭಾವಶಾಲಿಗಳಾಗಿರಲಿ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸ್ವತಂತ್ರ ಬದುಕನ್ನು ಕಟ್ಟಿಕೊಳ್ಳುವ ಕನಸಿನೊಂದಿಗೆ ವಿದ್ಯಾಭ್ಯಾಸದಲ್ಲಿ ತೊಡಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಸಮಾಜದ ಮನಸ್ಸನ್ನು ಕಲುಷಿತಗೊಳಿಸುವ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮಹಿಳೆಯರ ಮೇಲಿನ ಕಿರುಕುಳ,ದೌರ್ಜನ್ಯಗಳನ್ನು ಒಬ್ಬ ಮಹಿಳೆಯಾಗಿ ನಾನು ಸಹಿಸಲು ಸಾಧ್ಯವಿಲ್ಲ ಎಂದು ರೂಪಾಲಿ ನಾಯ್ಕ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ಅತ್ಯಾಚಾರ, ಹತ್ಯೆ ಹಾಗೂ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು,ಅಪರಾಧಿಗಳು ನಿರ್ಭಯವಾಗಿ ಸಂಚರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಯುವತಿ ರಿಶೆಲ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಯಲುಗೊಳಿಸಿ,ತಪ್ಪಿತಸ್ಥರನ್ನು ತಕ್ಷಣ ಕಾನೂನು ಚೌಕಟ್ಟಿನೊಳಗೆ ತರಬೇಕು.ಈ ಮೂಲಕ ಯುವತಿ ಹಾಗೂ ಆಕೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ರೂಪಾಲಿ ಎಸ್. ನಾಯ್ಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ/ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗನ ರಕ್ಷಣೆ