ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನ ಅಕ್ಟೋಬರ್ 23ರಂದು ನಡೆಯಲಿದ್ದು, ಅರ್ಹ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.

ಸರ್ಕಾರದ ಅಧಿಸೂಚನೆ ಸಂಖ್ಯೆ ಸಿಆಸುಇ 32 ಹೆಚ್‌ಎಚ್‌ಎಲ್ 2026, ದಿನಾಂಕ 17-10-2026ರ ಅನ್ವಯ, ಮತಕ್ಷೇತ್ರದ ವ್ಯಾಪ್ತಿಯ ಅರ್ಹ ಮತದಾರರಿಗೆ ಅಕ್ಟೋಬರ್ 23ರ ಶುಕ್ರವಾರ ಮತದಾನದಲ್ಲಿ ಪಾಲ್ಗೊಳ್ಳಲು ಅನುಕೂಲ ಕಲ್ಪಿಸುವಂತೆ ಸೂಚಿಸಲಾಗಿದೆ. ಮತದಾರರು ಪೂರ್ವಾನುಮತಿ ಪಡೆಯುವ ಷರತ್ತಿನೊಂದಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲಾಗಿದೆ.

ಇದಲ್ಲದೆ, ವಿವಿಧ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು, ಇಲಾಖೆಗಳು ಹಾಗೂ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಪ್ರಜಾ ಪ್ರತಿನಿಧಿ ಕಾಯ್ದೆ–1951ರ ಕಲಂ 135(ಬಿ)ರ ಅನ್ವಯ ಅಗತ್ಯ ಕ್ರಮ ಕೈಗೊಳ್ಳುವಂತೆ ಮತಕ್ಷೇತ್ರದ ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಈ ಕುರಿತು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ತಿಳಿಸಿದ್ದಾರೆ.