ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ, ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ತೆಂಕಣಕೇರಿ ಗ್ರಾಮದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಶಾಲೆಯ ವಿದ್ಯುತ್ ಸರ್ಕ್ಯೂಟ್ನಲ್ಲಿ ಉಂಟಾದ ದೋಷದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಪೊಲೀಸರು ಕೂಡ ಶಾಲೆಗೆ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದರು. ಘಟನೆಯ ಮಾಹಿತಿ ತಿಳಿದ ಸ್ಥಳೀಯರು ಶಾಲೆಯ ಬಳಿ ಜಮಾಯಿಸಿದರು.
ಶಾಲೆ ಪುನರಾರಂಭಕ್ಕೂ ಮುನ್ನ ಬೆಂಕಿ ಅವಘಡ
ಇoದೂ ಶಾಲೆ ಆರಂಭವಾಗಬೇಕಿದ್ದ ಹಿನ್ನೆಲೆಯಲ್ಲಿ ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಬೆಂಕಿಯಿಂದ ಶಾಲೆಯ ಕಟ್ಟಡ, ಪೀಠೋಪಕರಣಗಳು ಹಾಗೂ ಶೈಕ್ಷಣಿಕ ಉಪಕರಣಗಳಿಗೆ ಉಂಟಾಗಿರುವ ಹಾನಿಯ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ.
ಸಂಬಂಧಪಟ್ಟ ಅಧಿಕಾರಿಗಳು ವಿವರವಾದ ಪರಿಶೀಲನೆ ನಡೆಸಿದ ಬಳಿಕ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.

