ಸುದ್ದಿಬಿಂದು ಬ್ಯೂರೋ ವರದಿ

ಮುಂಡಗೋಡ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಪಾಳ ಕ್ಲಸ್ಟರ್ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಕೊರತೆ ಎದುರಾಗಿದ್ದು, ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಲೆಯ ಕೆಲ ವಿದ್ಯಾರ್ಥಿಗಳಿಗೆ ಮಾತ್ರ ಪಠ್ಯಪುಸ್ತಕಗಳನ್ನು ಪೂರೈಸಲಾಗಿದ್ದು,ಇನ್ನುಳಿದ ವಿದ್ಯಾರ್ಥಿಗಳಿಗೆ ಪುಸ್ತಕಗಳು ದೊರೆಯದಿರುವುದರಿಂದ ಇಬ್ಬರು-ಮೂವರು ಮಕ್ಕಳು ಸೇರಿ ಒಂದೇ ಪುಸ್ತಕ ಓದುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳ ಪಾಲಕರು ಆರೋಪಿಸಿದ್ದಾರೆ.ಇದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗುತ್ತಿದ್ದು,ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರತ್ಯೇಕ ಪಠ್ಯಪುಸ್ತಕ ಒದಗಿಸಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.

ಪಠ್ಯಪುಸ್ತಕಗಳ ಕೊರತೆಯ ಸಮಸ್ಯೆಯನ್ನು ಪರಿಹರಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (DDPI) ಶಾಲೆ ಆರಂಭವಾಗುವ ಮುನ್ನವೇ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸದಿದ್ದರೆ,ಶಾಲಾ ಮಕ್ಕಳು ಮತ್ತು ಪಾಲಕರು ಶಾಲೆಯೊಳಗೆ ಪ್ರವೇಶಿಸದೆ ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳ ಶಿಕ್ಷಣದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದೆ,ಪುಸ್ತಕಗಳು ದೊರೆಯದ ಎಲ್ಲ ವಿದ್ಯಾರ್ಥಿಗಳಿಗೆ ಕೂಡಲೇ ಪಠ್ಯಪುಸ್ತಕಗಳನ್ನು ವಿತರಿಸಬೇಕು.ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ವಂತ ಪುಸ್ತಕದೊಂದಿಗೆ ಕಲಿಯಲು ಅವಕಾಶ ಕಲ್ಪಿಸಬೇಕು ಎಂಬುದು ಪಾಲಕರ ಒತ್ತಾಯವಾಗಿದೆ. ಪಾಳ ಕ್ಲಸ್ಟರ್ ವ್ಯಾಪ್ತಿಯ ಶಾಲೆಯ ಪಠ್ಯಪುಸ್ತಕಗಳ ಸಮಸ್ಯೆಗೆ ಶಿಕ್ಷಣ ಇಲಾಖೆ ಯಾವಾಗ ಪರಿಹಾರ ಒದಗಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.