ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯದ ದಕ್ಷಿಣ ಹಾಗೂ ಮಧ್ಯ ಒಳನಾಡಿನ ಹಲವು ಜಿಲ್ಲೆಗಳು ಮತ್ತು ಘಟ್ಟ ಪ್ರದೇಶಗಳಿಗೆ ಹೊಂದಿಕೊಂಡ ಕರಾವಳಿಯ ಕೆಲವೆಡೆ ಶನಿವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಪ್ರದೇಶಗಳಲ್ಲಿ ಜೋರು ಮಳೆ ಬೀಳುವ ಸಾಧ್ಯತೆಯೂ ಇದೆ.
ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು,ಮುಂಜಾನೆಯಿಂದಲೇ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದಕ್ಕೆ ವಿರುದ್ಧವಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಆದರೆ, ಕೆಲವು ಕಡೆ ಸ್ಥಳೀಯವಾಗಿ ಮಳೆಯಾಗಬಹುದು.ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಭಾಗಗಳಲ್ಲಿ ತಾಪಮಾನ ಸಾಮಾನ್ಯ ಮಟ್ಟದಲ್ಲಿರಲಿದ್ದು, ದಕ್ಷಿಣ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆಯಾಗುವ ನಿರೀಕ್ಷೆಯಿದೆ.
ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕೊಡಗು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ತುಮಕೂರು, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಮೈಸೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಇನ್ನು ಧಾರವಾಡ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ವಿಜಯನಗರ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ ಮತ್ತು ಮಳೆಯ ಪ್ರಭಾವ ಹೆಚ್ಚಾಗುವ ಸಾಧ್ಯತೆಯಿದ್ದರೆ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ಇದನ್ನೂ ಓದಿ/ ಒಂದು ಎಕರೆ ಜಮೀನಿಗಾಗಿ ಮಹಿಳೆ ಮೇಲೆ ಬುಲೆರೋ ಹರಿಸಿ ಕೊಲೆಗೆ ಯತ್ನ!

