
ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆ ಇದೀಗ ಸ್ಥಳೀಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದೆ. ಅಧ್ಯಕ್ಷ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದು, ತಮ್ಮದೇ ಆದ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಭುವನ್ ಭಾಗ್ವತ್ ಅವರನ್ನೇ ಮುಂದುವರಿಸಬೇಕು ಎಂಬ ಅಭಿಪ್ರಾಯ ಪಕ್ಷದ ಬಹುತೇಕ ಮುಖಂಡರು ಹಾಗೂ ಹೆಚ್ಚಿನ ಕಾರ್ಯಕರ್ತರಿಂದ ವ್ಯಕ್ತವಾಗುತ್ತಿದೆ.
ಭುವನ್ ಭಾಗ್ವತ್ ಅವರು ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ಕೈಗೊಂಡಿರುವ ಉತ್ತಮ ಕಾರ್ಯಗಳು, ಪಕ್ಷದ ಸಂಘಟನೆಯಲ್ಲಿ ತೋರಿದ ಆಸಕ್ತಿ ಹಾಗೂ ಕಾರ್ಯಕರ್ತರೊಂದಿಗೆ ಬೆಳೆಸಿಕೊಂಡಿರುವ ಆತ್ಮೀಯ ಸಂಬಂಧವೇ ಅವರ ಪರವಾಗಿ ಬೆಂಬಲ ಹೆಚ್ಚಾಗಲು ಪ್ರಮುಖ ಕಾರಣ ಎನ್ನುವ ಬಗ್ಗೆ ಪಕ್ಷದ ವಲಯದಲ್ಲಿ ಚರ್ಚೆಯಾಗುತ್ತಿದೆ. ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸ್ಥಳೀಯ ಕಾಂಗ್ರೆಸ್ನಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ ಎನ್ನಲಾಗುತ್ತಿದೆ.
ಪಕ್ಷದ ಸಂಘಟನೆಗೆ ಒತ್ತು ನೀಡುವುದರ ಜೊತೆಗೆ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಅವರ ಕಾರ್ಯವೈಖರಿ, ಹಾಲಿ ಅಧ್ಯಕ್ಷರ ಮುಂದುವರಿಕೆಗೆ ಒಲವು ವ್ಯಕ್ತವಾಗಲು ಕಾರಣವಾಗಿದೆ. ಹೀಗಾಗಿ, ಅಧ್ಯಕ್ಷ ಸ್ಥಾನಕ್ಕೆ ಹೊಸಬರು ಪ್ರಯತ್ನ ನಡೆಸುತ್ತಿದ್ದರೂ, ಭುವನ್ ಭಾಗ್ವತ್ ಅವರನ್ನೇ ಮತ್ತೊಮ್ಮೆ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು ಎಂಬ ಅಭಿಪ್ರಾಯ ಕಾಂಗ್ರೆಸ್ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ.
ಇನ್ನೊಂದೆಡೆ, ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಯಾವ ಮಾನದಂಡಗಳ ಆಧಾರದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಕುತೂಹಲವೂ ಮೂಡಿದೆ. ಸಂಘಟನಾತ್ಮಕ ಅನುಭವ, ಕಾರ್ಯಕರ್ತರೊಂದಿಗಿನ ಬಾಂಧವ್ಯ ಹಾಗೂ ಪಕ್ಷದ ಬೆಳವಣಿಗೆಗೆ ನೀಡಿದ ಕೊಡುಗೆಗಳು ಆಯ್ಕೆಯ ಸಂದರ್ಭದಲ್ಲಿ ಮಹತ್ವ ಪಡೆಯಲಿವೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯಲ್ಲಿ ಭುವನ್ ಭಾಗ್ವತ್ ಅವರ ಮುಂದುವರಿಕೆಯ ವಿಚಾರ ಪ್ರಮುಖ ಚರ್ಚೆಯಾಗಿದೆ. ಹಾಲಿ ಅಧ್ಯಕ್ಷರ ಮೇಲಿನ ಬೆಂಬಲಕ್ಕೆ ವರಿಷ್ಠರು ಮನ್ನಣೆ ನೀಡುತ್ತಾರೆಯೇ ಅಥವಾ ಹೊಸ ಮುಖಕ್ಕೆ ಅವಕಾಶ ಕಲ್ಪಿಸುತ್ತಾರೆಯೇ ಎನ್ನುವುದನ್ನ ಕಾದು ನೋಡಬೇಕಿದೆ.

