ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: 2028ರ ವಿಧಾನಸಭಾ ಚುನಾವಣೆಗೆ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಈಗಿನಿಂದಲೇ ಹೊಸ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿವೆ. ಮೈತ್ರಿಯ ಭಾಗವಾಗಿ ಕ್ಷೇತ್ರ ಹಂಚಿಕೆ ಹಾಗೂ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಉಂಟಾಗಬಹುದಾದ ರಾಜಕೀಯ ಸವಾಲುಗಳನ್ನು ಎದುರಿಸಲು ಜೆಡಿಎಸ್ ನಾಯಕರು ಹೊಸ ರಣತಂತ್ರ ರೂಪಿಸುತ್ತಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳ ನಡುವೆ ಟಿಕೆಟ್ ಹಂಚಿಕೆ ವಿಚಾರವಾಗಿ ಗೊಂದಲ ಉಂಟಾದರೆ, ಅಂತಹ ಕ್ಷೇತ್ರಗಳಲ್ಲಿ ಪಕ್ಷದ ಪ್ರಬಲ ಮುಖಂಡರನ್ನೇ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ಚಿಂತನೆ ನಡೆಸಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ, ರಾಜ್ಯದ ಸುಮಾರು 10 ವಿಧಾನಸಭಾ ಕ್ಷೇತ್ರಗಳನ್ನು ಜೆಡಿಎಸ್ ಗುರುತಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಜೆಡಿಎಸ್ಗೆ ಟಿಕೆಟ್ ಸಿಗದೆ ಇದ್ದಲ್ಲಿ, ಪಕ್ಷದ ಪ್ರಭಾವಿ ಮುಖಂಡರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅವರನ್ನು ಪಕ್ಷೇತರ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸುವುದು ಜೆಡಿಎಸ್ ಹೊಸ ತಂತ್ರಗಾರಿಕೆ ಆಗಿದೆ ಎನ್ನಲಾಗಿದೆ.
ಅಲ್ಲದೆ, ಪಕ್ಷೇತರ ಅಭ್ಯರ್ಥಿಗಳ ಚುನಾವಣಾ ಸ್ಪರ್ಧೆಗೆ ಬೇಕಾಗುವ ಎಲ್ಲಾ ನೆರವು ಹಾಗೂ ರಾಜಕೀಯ ಬೆಂಬಲ ನೀಡುವ ಬಗ್ಗೆಯೂ ಜೆಡಿಎಸ್ನಲ್ಲಿ ಚಿಂತನೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಮೂಲಕ ಮೈತ್ರಿ ಧರ್ಮವನ್ನು ಪಾಲಿಸುತ್ತಲೇ ತನ್ನ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ರಾಜಕೀಯ ನೆಲೆ ಉಳಿಸಿಕೊಳ್ಳುವ ಲೆಕ್ಕಾಚಾರ ಜೆಡಿಎಸ್ ನಾಯಕರದ್ದಾಗಿದೆ ಎನ್ನಲಾಗುತ್ತಿದೆ.
ಈಗಾಗಲೇ ರಾಜ್ಯದ 10 ಕ್ಷೇತ್ರಗಳನ್ನು ಗುರುತಿಸುವ ಪ್ರಕ್ರಿಯೆ ನಡೆದಿದ್ದು, ಅದರಲ್ಲೂ ಕರಾವಳಿ ತಾಲೂಕಿನ ಒಂದು (ಜಿಲ್ಲೆಯ ಮಧ್ಯವರ್ತಿ ಕ್ಷೇತ್ರದ) ವಿಧಾನಸಭಾ ಕ್ಷೇತ್ರವೂ ಜೆಡಿಎಸ್ ಹೈಕಮಾಂಡ್ ಗಮನದಲ್ಲಿದೆ ಎನ್ನಲಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಕಟ್ಟಾ ಬೆಂಬಲಿಗರಾಗಿರುವ ಪ್ರಬಲ ನಾಯಕರೊಬ್ಬರನ್ನ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಕುರಿತು ರಾಜ್ಯ ನಾಯಕರು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಬಿಜೆಪಿ–ಜೆಡಿಎಸ್ ಮೈತ್ರಿಯಡಿ ಕ್ಷೇತ್ರ ಹಂಚಿಕೆಯಲ್ಲಿ ಜೆಡಿಎಸ್ಗೆ ಅವಕಾಶ ಸಿಗದಿದ್ದರೂ, ತನ್ನ ಬೆಂಬಲಿಗರನ್ನು ರಾಜಕೀಯವಾಗಿ ಕೈಬಿಡಬಾರದು ಎಂಬ ಉದ್ದೇಶದಿಂದ ಈ ತಂತ್ರ ರೂಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಯೂ ಇದೀಗ ಮುನ್ನೆಲೆಗೆ ಬಂದಿದೆ.
ಒಟ್ಟಿನಲ್ಲಿ, 2028ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿ–ಜೆಡಿಎಸ್ ಮೈತ್ರಿಯ ಕ್ಷೇತ್ರ ಹಂಚಿಕೆ, ಟಿಕೆಟ್ ಹಂಚಿಕೆ ಹಾಗೂ ಪಕ್ಷೇತರ ಅಭ್ಯರ್ಥಿಗಳ ಸಾಧ್ಯತೆಗಳು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿವೆ.

