
ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಹಾಗೂ ಹಾಲು, ಮೊಸರಿನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ನವೆಂಬರ್ 6 ರಂದು ಕಾರವಾರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 11 ಗಂಟೆಗೆ ಕಾರವಾರದ ಸುಭಾಷ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸಮಾವೇಶಗೊಳ್ಳಲಿದ್ದು, ಅಲ್ಲಿಂದ ಮೆರವಣಿಗೆಯ ಮೂಲಕ ಕಾರವಾರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಎದುರು ತೆರಳಿ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರದ ಮಾಜಿ ಶಾಸಕಿ ರೂಪಾಲಿ ನಾಯ್ಕ, ಕುಮಟಾ ಶಾಸಕ ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲೆಯ ಮಾಜಿ ಶಾಸಕರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಜನವಿರೋಧಿ ನೀತಿಯನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ತಿಳಿಸಿದ್ದಾರೆ.

