ಸುದ್ದಿಬಿಂದು ಬ್ಯೂರೋ ವರದಿ
ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸೆಪ್ಟೆಂಬರ್ 18ರಂದು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಗಡಿಪಾರು ಆದೇಶ ಹೊರಡಿಸಿದ್ದರು. ಈ ನಿರ್ಧಾರವನ್ನು ಪ್ರಶ್ನಿಸಿ ತಿಮರೋಡಿ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು.
ಮಂಗಳವಾರ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾ ಪೀಠದಲ್ಲಿ ವಿಚಾರಣೆ ನಡೆಯಿತು. ಅರ್ಜಿದಾರರ ವಾದ ಆಲಿಸಿದ ನಂತರ, ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೆ ತಡೆಯಾಜ್ಞೆ ನೀಡಲಾಗಿದೆ.
ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸುವಂತೆ ಕೋರ್ಟ್ ನಿರ್ದೇಶಿಸಿದೆ.
“ನನ್ನ ಅಹವಾಲು ಆಲಿಸದೆ, ಏಕಾಏಕಿ ಗಡಿಪಾರು ಆದೇಶ ಹೊರಡಿಸಲಾಗಿದೆ. ಇದು ಕಾನೂನುಬಾಹಿರ ಹಾಗೂ ಏಕಪಕ್ಷೀಯ ಕ್ರಮ” ಎಂದು ಅರ್ಜಿಯಲ್ಲಿ ತಿಮರೋಡಿ ತಿಳಿಸಿದ್ದಾರೆ. ಆದೇಶವನ್ನು ರದ್ದುಪಡಿಸಲು ಹಾಗೂ ಅರ್ಜಿ ಇತ್ಯರ್ಥವಾಗುವವರೆಗೆ ಜಾರಿಗೆ ತಡೆ ನೀಡಲು ಅವರು ಮನವಿ ಸಲ್ಲಿಸಿದ್ದರು.
ಈ ಸುದ್ದಿಯನ್ನ ಓದಿ : ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ