ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಮಂಗನ ಕಾಯಿಲೆ (KFD) ತಡೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶೀಘ್ರದಲ್ಲೇ ಹೊಸ KFD ಪರೀಕ್ಷಾ ಪ್ರಯೋಗಾಲಯ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಶಿವಮೊಗ್ಗದಲ್ಲಿ ಒಂದೇ ಲ್ಯಾಬ್ ಕಾರ್ಯನಿರ್ವಹಿಸುತ್ತಿದ್ದು, ಮಾದರಿ ಪರೀಕ್ಷೆಗಳ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ನೂತನ ಲ್ಯಾಬ್ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಉಪಕರಣಗಳನ್ನು ಈಗಾಗಲೇ ಖರೀದಿಸಲಾಗಿದೆ. ಶೀಘ್ರದಲ್ಲೇ ಲ್ಯಾಬ್ ಕಾರ್ಯಾರಂಭವಾಗಲಿದ್ದು, ಇದರಿಂದ ಶಿರಸಿ, ಸಿದ್ದಾಪುರ ಸೇರಿದಂತೆ ಸುತ್ತಮುತ್ತಲಿನ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ರೋಗವನ್ನು ಬೇಗ ಗುರುತಿಸಿ ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.

ಮಂಗನ ಕಾಯಿಲೆ ಎಂದು ಕರೆಯಲಾಗುವ ಈ ರೋಗವು ಪ್ರತಿ ವರ್ಷ ಅಕ್ಟೋಬರ್‌ನಿಂದ ಜೂನ್‌ವರೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಕಾಯಿಲೆ ಕಂಡುಬರುತ್ತಿದ್ದು, ಇದರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಂಪೂರ್ಣ ಸನ್ನದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ 1,163, ಚಿಕ್ಕಮಗಳೂರಿನಲ್ಲಿ 124, ಉತ್ತರ ಕನ್ನಡದಲ್ಲಿ 368 ಹಾಗೂ ಉಡುಪಿಯಲ್ಲಿ 12 ಜನರನ್ನು ತಪಾಸಣೆ ನಡೆಸಲಾಗಿದೆ. ಇದರಲ್ಲಿ 13 ಜನರಿಗೆ ಕಾಯಿಲೆ ಪತ್ತೆಯಾಗಿದ್ದು, ಎಲ್ಲರಿಗೂ ಸಮರ್ಪಕ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಕೆಎಂಸಿ ಮಣಿಪಾಲ್, SIMS ಶಿವಮೊಗ್ಗ ಹಾಗೂ KRIMS ಕಾರವಾರ ಆಸ್ಪತ್ರೆಗಳನ್ನು KFD ರೋಗಿಗಳಿಗೆ ರೆಫರಲ್ ಆಸ್ಪತ್ರೆಗಳಾಗಿ ಗುರುತಿಸಲಾಗಿದೆ. ಜೊತೆಗೆ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ವಿಶೇಷ ತರಬೇತಿಗಳನ್ನು ನೀಡಲಾಗಿದ್ದು, ತೀರ್ಥಹಳ್ಳಿ, ಸಾಗರ, ಸಿದ್ದಾಪುರ, ಹೊನ್ನಾವರ, ಕೊಪ್ಪ ಮತ್ತು ಎನ್.ಆರ್.ಪುರ ತಾಲ್ಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.

ರೋಗದ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆದ ಗುಣಮುಖರಾದವರನ್ನು ಮುಂದಿನ 21 ದಿನಗಳ ಕಾಲ ಆರೋಗ್ಯ ಇಲಾಖೆ ಸತತವಾಗಿ ಮೇಲ್ವಿಚಾರಣೆ ಮಾಡಲಿದೆ. ಎಲ್ಲ KFD ರೋಗಿಗಳಿಗೆ ಉಚಿತ ಅಂಬುಲೆನ್ಸ್ ಸೇವೆ ಹಾಗೂ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಸಚಿವರು ಹೇಳಿದರು.

ಈ ವರ್ಷ ಒಂದು ಸಾವು ಕೂಡ ಸಂಭವಿಸಬಾರದು ಎಂಬ ಉದ್ದೇಶದಿಂದ ಔಷಧಿ, ವೈದ್ಯಕೀಯ ಸಿದ್ಧತೆ ಮತ್ತು ಇತರೆ ಎಲ್ಲಾ ಅಗತ್ಯ ಕ್ರಮಗಳನ್ನು ಈಗಲೇ ಕೈಗೊಳ್ಳಲಾಗಿದೆ. ಮಂಗನ ಕಾಯಿಲೆಗೆ ಸಂಬಂಧಿಸಿದ ಹೊಸ ಲಸಿಕೆಯ ಕ್ಲಿನಿಕಲ್ ಟ್ರಯಲ್ ಅನ್ನು ICMR ನಡೆಸುತ್ತಿದ್ದು, ಇನ್ನೊಂದು ವರ್ಷದೊಳಗೆ ಲಸಿಕೆ ಸಾರ್ವಜನಿಕರಿಗೆ ಲಭ್ಯವಾಗುವ ಸಾಧ್ಯತೆ ಇದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಇದನ್ನೂ ಓದಿ/ಕರಾವಳಿ ಉತ್ಸವಕ್ಕೆ ವೈಮಾನಿಕ ವೈಭವ: ಕಾರವಾರದಲ್ಲಿ ಹೆಲಿಕ್ಯಾಪ್ಟರ್ ರೈಡ್‌ಗೆ ಭರ್ಜರಿ ಚಾಲನೆ