ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಅಂಕೋಲಾದಿಂದ ಕಾರವಾರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಪಕ್ಕದಲ್ಲಿ ಕುಳಿತ ಯುವಕನಿಂದ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ಬಸ್‌ನಲ್ಲಿ ನಿದ್ದೆ ಮಾಡುತ್ತಿದ್ದ ವೇಳೆ ಯುವತಿಯ ಮೈ ಮೇಲೆ ಕೈ ಇಟ್ಟು ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದ್ದು, ಯುವತಿ ಆತನಿಗೆ ಕಪಾಳಮೋಕ್ಷ ಮಾಡಿ ಆತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ…

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡುತ್ತಿದ್ದಂತೆ ಆತನ ಕೈ ಮೈ ಮೇಲೆ ಇರುವುದನ್ನ ಕಂಡು ಬೆಚ್ಚಿಬಿದ್ದ ಯುವತಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ವಿಡಿಯೋವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದ ಯುವತಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾಳೆ,ಪೊಲೀಸ್ ಹಿರಿಯ ಅಧಿಕಾರಿಗಳನ್ನು ಟ್ಯಾಗ್ ಮಾಡಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದಾರೆ.

ಘಟನೆಯ ವೇಳೆ ಯುವಕನಿಗೆ ಅವಾಚ್ಯ ಶಬ್ದಗಳಿಂದ ಗದರಿಸಿ, ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದ ಯುವತಿ, “ಮಹಿಳೆಯರ ರಕ್ಷಣೆಗೆ ನಾವು ತಾವೇ ಮುಂದಾಗಬೇಕಾದ ಪರಿಸ್ಥಿತಿ ಬಂದಿದೆ” ಎಂಬ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.ಸಾರಿಗೆ ಬಸ್‌ನಲ್ಲಿ ಮಹಿಳೆಯರ ಸುರಕ್ಷತೆ ಕುರಿತಾಗಿ ಮತ್ತೊಮ್ಮೆ ಗಂಭೀರ ಚರ್ಚೆಗೆ ಈ ಘಟನೆ ಕಾರಣವಾಗಿದೆ.

ಈ ಘಟನೆ ಕಾರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದ್ದು, ಪ್ರಕರಣದ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅವರು ತಕ್ಷಣ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, “ಯುವತಿ ನಮ್ಮ ಠಾಣೆಗೆ ಬಂದು ದೂರು ನೀಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯ ಯುವತಿ ಹಾಗೂ ಆರೋಪಿತ ಯುವಕನ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ” ಎಂದಿದ್ದಾರೆ.