ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ:ಸರ್ಕಾರದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದು, ಅಕ್ಕಿ ಕಳ್ಳನಿಗೆ ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿಯ ಆಧಾರದ ಮೇಲೆ ಆಹಾರ ನಿರೀಕ್ಷಕ ಉದಯ ದ್ಯಾಮಪ್ಪ ತಳವಾರ ಅವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ರಂಗಿನಕಟ್ಟಾ ಬಳಿ ಕಾರ್ಯಾಚರಣೆ ನಡೆಸಲಾಗಿದ್ದು, ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ಭಟ್ಕಳದ ಮುಗ್ಧಮ್ ಕಾಲೋನಿಯ ನಿವಾಸಿ ಆಸೀಫ್ ಉಲ್ಲಾ (38) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಅಕ್ಕಿ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದ್ದು, ವಾಹನದಲ್ಲಿ ಸುಮಾರು 1,150 ಕೆ.ಜಿ. ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಹಾಗೂ ಸಾಗಾಟ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


