ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ‘ಹಾಡುಹಕ್ಕಿ’, ಪದ್ಮಶ್ರೀ ಪುರಸ್ಕೃತೆ ಬೊಮ್ಮಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ ಶಾಸಕರಾದ ಗಣಪತಿ ಉಳ್ವೇಕರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುಕ್ರಿ ಬೊಮ್ಮಗೌಡ ಅವರು ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು ಎಂದು ತಿಳಿಸಿದ್ದಾರೆ.
ಅವರಲ್ಲಿದ್ದ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, ‘ಜಾನಪದ ಶ್ರೀ’ ಪ್ರಶಸ್ತಿ, ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು ಎಂದು ತಿಳಿಸಿದ್ದಾರೆ. ಅವರ ಕುಟುಂಬ ವರ್ಗದವರಿಗೆ ಈ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ